ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ
ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು.
ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ವರ್ಕಿಂಗ್ ವುಮೆನ್ಸ್ ಹಾಸ್ಟೆಲ್
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ರೀಲ್ಸ್ ಗೆ ಪ್ರೋತ್ಸಾಹಿಸಿ
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ
ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ಫೋನ್ ಮಾಡಿ ಮಾತನಾಡಿದರು. ಸಹಾಯವಾಣಿ ಸಿಬ್ಬಂದಿಯೊಂದಿಗೆ ಅಪರಿಚಿತರಂತೆ ಮಾತನಾಡಿದ ಸಚಿವರು, ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಸನ್ಮಾನ
ಸಭೆ ಬಳಿಕ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಶಿರಾ ಕ್ಷೇತ್ರದ ಶಾಸಕರೂ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳೂ ಆಗಿರುವ ಟಿ.ಬಿ.ಜಯಚಂದ್ರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಸಿದ್ದೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಮರಿಯಪ್ಪ, ವಿಕಲ ಚೇತನ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪಾ ರಾಯ್ಕರ್ ಸೇರಿದಂತೆ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.