ಬೀದರ್: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೀದರ್‌ನಲ್ಲಿ ಇಂದು(ಡಿಸೆಂಬರ್.31) ಈ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇನ್ಫೋಸಿಸ್ ಕ್ಯಾಂಪಸ್ ಸುತ್ತ ಚಿರತೆ ಓಡಾಡಿರುವುದು ಸಿಸಿ ಕ್ಯಾಮರಾದ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಹೀಗಾಗಿ ತುರ್ತು ಕಾರ್ಯಚರಣೆ ನಡೆಸಿ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ಈ ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚಿರತೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡ ನಂತರ ಎಚ್ಚೆತ್ತ ಸಂಸ್ಥೆಯೂ ಮುನ್ನಚ್ಚೆರಿಕೆ ಕ್ರಮವಾಗಿ ಸಿಬ್ಬಂದಿಗಳಿಗೆ ರಜೆಯನ್ನು ಘೋಷಿಸಿ, ಉದ್ಯೋಗಿಗಳಿಗೆ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಬಳಸಲಾಗುತ್ತಿದ್ದು ಬಲೆ, ಅರವಳಿಕೆ ಔಷಧದೊಂದಿಗೆ ಚಿರತೆ ಸೆರೆಗೆ ಸಜ್ಜಾಗಿದ್ದಾರೆ. ಅಲ್ಲದೇ ಶೀಘ್ರವೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲಿದ್ದಾರೆ ಎಂದು ಹೇಳಿದ್ದಾರೆ.