ಯಾದಗಿರಿ/ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ.
ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.
ಕಲಬುರಗಿ ನಗರ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 5 ಜನರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ಶನಿವಾರ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪರಿಶೀಲನೆ ಮಾಡುವ ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಿಲ್ಲ, ಪರಿಣಾಮ ಅಕ್ರಮಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಪುಟ್ಟು ಎಂದು ಹೇಳಲಾಗುತ್ತಿದ್ದು, ಈತನ ಜೊತೆ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದ ಒಬ್ಬ ಸಾಥ್ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಬ್ಲೂಟೂತ್ ಉಪಕರಣ ಬಳಕೆ, 9 ಜನ ಬಂಧನ:
ಈ ಹಿಂದೆ ರಾಜ್ಯದಲ್ಲಿ ನಡೆದ 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕಲಬುರಗಿಯಲ್ಲಿ. ಈ ಪ್ರಕರಣ ಮಾಸುವ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಎಫ್‍ಡಿಎ ಹುದ್ದೆಗಳಿಗಾಗಿ ಶನಿವಾರ ನಡೆದ ಪ್ರವೇಶ ಪರೀಕ್ಷೆಯಲ್ಲಿ 3 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅತ್ಯಾಧುನಿಕ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ 22 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.