ಬೆಂಗಳೂರು: ಸೆಪ್ಟಂಬರ್.30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಭೂ ಸುಧಾರಣಾ ಕಾಯ್ದೆ ರದ್ದು ಮಾಡಬೇಕು.
ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಕಬ್ಬಿನ ಉತ್ಪನ್ನ ಇಳುವರಿ ಕಡಿಮೆ ತೋರುತ್ತಿರುವ ಕಾರಣ ಪ್ರಸಕ್ತ ಸಾಲಿಗೆ ಎಫ್‌ಆರ್‌ಪಿ ದರಕ್ಕಿಂತ ಕಬ್ಬಿನ ಹೆಚ್ಚುವರಿ ದರ ನಿಗದಿ ಮಾಡಬೇಕು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.