ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಫೆ.4 ಮತ್ತು 5 ರಂದು ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳಿಗೆ ಭಾಜನರಾದ ಮೈಸೂರಿನ ಪತ್ರಕರ್ತರಿಗೆ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಫೆ.4ರಂದು ಬೆಳಗ್ಗೆ 10.30ಕ್ಕೆ ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಚಿವ ಗೋವಿಂದ ಕಾರಜೋಳ `ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಚಿವ ಮುರುಗೇಶ ನಿರಾಣಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದು, ಹಲವು ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಫೆ.5ರ ಮಧ್ಯಾಹ್ನ 1.45ಕ್ಕೆ ಸಮಾರೋಪ ಸಮಾರಂಭ ಹಮ್ಮಿಕೊಂಡಿದ್ದು, ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದು, ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ಸಮ್ಮೇಳದಲ್ಲಿ ಭಾಗವಹಿಸಲು ಮೈಸೂರು ಜಿಲ್ಲೆಯಿಂದ 77 ಪತ್ರಕರ್ತರು ತೆರಳುತ್ತಿದ್ದೇವೆ. ರಾಜ್ಯ ಸಂಘವು ಎಲ್ಲಾ ಜಿಲ್ಲಾ ಸಂಘಗಳನ್ನು ಒಗ್ಗೂಡಿಸಿ ಮುನ್ನ ಡೆಸುತ್ತಿದೆ. ಮೈಸೂರು ಸಂಘಕ್ಕೆ ಮುಡಾದಿಂದ ಸಿಎ ನಿವೇಶನ ಮಂಜೂರಾಗಿದ್ದು ಸದರಿ ನಿವೇಶನದಲ್ಲಿ ಸಂಘದ ಸುಸಜ್ಜಿತ ಭವನ ನಿರ್ಮಿಸಲು ಸರ್ಕಾರದಿಂದ ಅನುದಾನ ಕಲ್ಪಿಸಿಕೊಡುವಂತೆ ರಾಜ್ಯಾಧ್ಯಕ್ಷರಲ್ಲಿ ಮನವಿ ಮಾಡಿದರು.
ಹುಣಸೂರು ತಾಲೂಕಿನ ಗಾವಡಗೆರೆ ಮಠದಲ್ಲಿ ಶೀಘ್ರದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ಆಯೋಜಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಕೂಡ್ಲಿ ಗುರುರಾಜ್, ಎಲ್.ಎಸ್.ಶ್ರೀಕಾಂತ್, ಅವಿನಾಶ್ ಜೈನಹಳ್ಳಿ, ಎಸ್.ಎಸ್.ಸಚ್ಚಿತ್, ಮಹಿ ಮಹೇಶ್ (ವಿಶೇಷ ಪ್ರಶಸ್ತಿ) ಹಾಗೂ `ಮೈಸೂರು ಮಿತ್ರ ಮತ್ತು `ಸ್ಟಾರ್ ಆಫ್ ಮೈಸೂರ್ ಛಾಯಾಗ್ರಾಹಕ ಲಕ್ಷ್ಮೀನಾರಾಯಣ ಯಾದವ್ ಅವರನ್ನು ಸನ್ಮಾನಿಸಲಾಯಿತು.
ಇತ್ತೀಚೆಗೆ ನಿಧನ ಹೊಂದಿದ ತಿ. ನರಸೀಪುರದ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸರ್ಕಾರದಿಂದ ೫ ಲಕ್ಷ ರೂ. ಪರಿಹಾರ ದೊರೆಕಿಸಿಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಂಜುನಾಥ್ ಅವರ ಪತ್ನಿ ಪಾರ್ವತಿ ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.
ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ರಾಘವೇಂದ್ರ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಎಂ.ಎಸ್. ಬಸವಣ್ಣ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ನಗರ ಕಾರ್ಯದರ್ಶಿ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.