ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಭಾರೀ ಪರಿಣಾಮ ಬೀರಿದೆ.
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.