ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತನ್ನ ಆದೇಶದಲ್ಲಿ ತಿಳಿಸಿದೆ.
2018ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ಗಳ ಮೂಲಕ ಬೇರೆ ಬೇರೆ ಸಂಘ-ಸಂಸ್ಥೆಗಳಿಂದ, ನಾಗರಿಕರಿಂದ ದೇಣಿಗೆ ನೀಡುವ ಪದ್ಧತಿಯನ್ನು ಜಾರಿಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ದೇಣಿಗೆಯ ರೂಪದಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಮುಖಂಡ ಆದರ್ಶ ಆರ್.ಐಯ್ಯರ್ ಎಂಬುವವರು ನ್ಯಾಯಾಲಯದಲ್ಲಿ ನಾಗರೀಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ವಿವಿಧ ಸಂಘ ಸಂಸ್ಥೆಗಳಿಂದ ಬಾಂಡ್‌ಗಳ ಹೆಸರಿನಲ್ಲಿ ಬಿಜೆಪಿಗೆ ಅತಿ ಹೆಚ್ಚು ದೇಣಿಗೆ ಬಂದಿದ್ದು, ಅದೆಲ್ಲವೂ ಬೇನಾಮಿ ಹಣವಾಗಿದೆ. ಇದರಲ್ಲಿ ಸುಮಾರು 8,000 ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಅಯ್ಯರ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಕೋರಿದ್ದರು. ಆದರ್ಶ ಅಯ್ಯರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡಿದೆ.