ಭಾನುವಾರ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಲವೆಡೆ ಭಾರೀ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್ 354, 294, 509, 506, 153A, 295, 295A ಹಾಗೂ 298 ಅಡಿಯಲ್ಲಿ ಜಾಮೀನುರಹಿತ ಎಫ್‌ಐಆರ್ ದಾಖಲಾಗಿದೆ.
ಪ್ರಭಾಕರ್ ಅವರ ವಿರುದ್ಧ ಈ ಹಿಂದೆಯೂ ಇಂತಹ ಹಲವು ದೂರುಗಳು ದಾಖಲಾಗಿದ್ದು, ಹೀಗಾಗಿ ಅವರ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ದೂರಿನಲ್ಲಿ ನಜ್ಮಾ ನಝೀರ್ ಒತ್ತಾಯಿಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯೇನು?
ಕಲ್ಲಡ್ಕ ಪ್ರಭಾಕರ್ ಭಟ್ ಮಂಡ್ಯದಲ್ಲಿ ಮಾತನಾಡಿದ್ದಾಗ “ಹಿಂದೆ ತಲಾಖ್ ತಲಾಖ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ತಲಾಖ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟದ್ದು ಇದೇ ಹಿಂದೂ ಧರ್ಮ” ಎಂದು ಹೇಳಿಕೆ ನೀಡಿದ್ದರು.