ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮೇ.12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್‍ನಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಬಿಎನ್‍ಎಸ್ 353(2)ರಡಿ ಪ್ರಕರಣದಡಿ ಎಫ್‍ಐಆರ್ ದಾಖಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.





