Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಬೀದರ್‌ನಲ್ಲಿ ಮಹಾಮಳೆಯಿಂದ ಪ್ರವಾಹ: ನಾಳೆ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

cm siddaramaiah

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ.

ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್‌ ಖಂಡ್ರೆ ಮಾತನಾಡಿದ್ದಾರೆ. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಖುತುಮಾನಗಳಲ್ಲಿ ಏರುಪೇರುಗಳಾಗಿದ್ದು, ಪರಿಣಾಮ ಬೀದರ್‌ ಜಿಲ್ಲೆ ಮೇಲೂ ಆಗುತ್ತಿದೆ.

ಇದನ್ನು ಓದಿ :  ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್‌ ಬಿತ್ತನೆ ಕಾರ್ಯ ನಡೆದಿದೆ.

ಆದರೆ ಈ ತಿಂಗಳು ಸುರಿದ ವಿಪರೀತ ಮಳೆಯಿಂದ ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲಾ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದರು.

ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅನೇಕ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ.

ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು ಬೀದರ್‌ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ ಎಂದರು.

ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬೀದರ್‌ನಲ್ಲಿ ಮಳೆಹಾನಿ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

Tags:
error: Content is protected !!