ಶಿವಮೊಗ್ಗ: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪ ಹುಚ್ಚುತನದ ಪರಮಾವಧಿಯನ್ನು ತೋರಿಸುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕರಾಗಲಿ ಅಥವಾ ನಾಯಕರಾಗಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡಿಲ್ಲ. ಯಾವ ಬಿಜೆಪಿ ಶಾಸಕರೂ ಕೂಡ ಕಾಂಗ್ರೆಸ್ ಶಾಸಕರನ್ನು ಕರೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಕೋವಿಡ್ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಜನರ ಜೀವ ಉಳಿಸುವ ಕೆಲಸ ಮಾಡಿದ್ದೇವೆ. ಆದರೆ ಸರ್ಕಾರ ರಾಜಕೀಯ ದುರುದ್ದೇಶದಿಂದ ಎಸ್‌ಐಟಿ ತಂಡವನ್ನು ರಚನೆ ಮಾಡಿದೆ. ಜನರ ಗಮನವನ್ನು ಮುಡಾ ಪ್ರಕರಣದಿಂದ ಬೇರೆ ಕಡೆಗೆ ತಿರುಗಿಸಲು ಕೋವಿಡ್ ವೇಳೆ ಹಗರಣ ನಡೆದಿದೆ ಎಂಬಂತೆ ಬಿಂಬಿಸುತ್ತಿದ್ದಾರೆ. ಅವರು ಏನು ಮಾಡುತ್ತಾರೋ ಮಾಡಲಿ, ನಾವು ಎಲ್ಲಾ ರೀತಿಯ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ತಿರುಗೇಟು ನೀಡಿದರು.





