ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೊಂಚ ತಣ್ಣಗಾಗಿದ್ದ. ಆದರೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಭಾರೀ ಆತಂಕಕ್ಕೇ ಈಡಾಗಿದ್ದಾರೆ.
ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಾಮರಾಜನಗರದಲ್ಲೂ ಭಾರೀ ಮಳೆಯಾಗಲಿದ್ದು, ಶಾಲೆಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆಯಿದೆ.
ಭಾರೀ ಮಳೆಯಿಂದ ಜಲಾಶಯಗಳಲ್ಲಿ ಹೊರಹರಿವು ಹೆಚ್ಚಾಗಲಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಲಾಗಿದೆ.