ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್ ತೀರ್ಪಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮೊದಲು ಕೋರ್ಟ್ ಆದೇಶ ಬರಲಿ. ಸರ್ಕಾರ ಅದಕ್ಕೆ ಬದ್ಧವಾಗಿರುತ್ತದೆ. ಸಂಘಟನೆಯವರೂ ಕೂಡ ಕೋರ್ಟ್ ಆದೇಶಕ್ಕೆ ಬದ್ಧರಾಗಿರಬೇಕು. 38 ತಿಂಗಳ ಹಿಂಬಾಕಿ ಕೇಳುತ್ತಿದ್ದಾರೆ. ಅದು ಹಿಂದಿನ ಸರ್ಕಾರದ ಆದೇಶ. 14 ತಿಂಗಳ ಹಣ ನೀಡುವುದಕ್ಕೆ ಸಿಎಂ ಸಿದ್ಧರಿದ್ದಾರೆ. ಆದರೂ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಇನ್ನು ಸಾರಿಗೆ ನೌಕರರ ಮುಷ್ಕರದಿಂದ ಜನರಿಗೆ ಅನಾನುಕೂಲವಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.





