ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ.
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸಭೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು
- ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಬರುವುದು
- ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು
- ಎಂಎಸ್‌ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ‘ಸರ್ಕಾರಿ ನೌಕರರ ಕ್ಯಾಂಟೀನ್’
ಯಾವ ಧಿರಿಸು? - ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು
- ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು





