ಬೆಂಗಳೂರು: ರಾಜ್ಯ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಾಗಿದ್ದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಇದೀಗ ಅಕ್ಕಿಯನ್ನೇ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಂಚ ಗ್ಯಾರಂಟಿಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅಂತೆಯೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅವುಗಳನ್ನು ಜಾರಿಗೊಳಿಸಿತ್ತು. ಅವುಗಳಲ್ಲಿ ಒಂದಾಗಿರುವ ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ನೀಡುವುದಾಗಿ ತಿಳಿಸಿತ್ತು. ಆದರೆ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆ.ಜಿ.ಅಕ್ಕಿ ಮಾತ್ರ ನೀಡಿ, ಉಳಿದ 5 ಕೆ.ಜಿ.ಅಕ್ಕಿಯ ಬದಲಿಗೆ 170 ರೂ. ನೀಡಲಾಗುತ್ತದೆ ಎಂದು ಘೋಷಿಸಿತ್ತು. ಆದರೆ ಇದೀಗ ಆ ಹಣದ ಬದಲಿಗೆ 10 ಕೆ.ಜಿ. ಅಕ್ಕಿಯನ್ನೇ ನೀಡಲು ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ತಿಂಗಳಿನಲ್ಲೇ ಅಕ್ಕಿ ವಿತರಣೆಗೆ ಸಿದ್ಧತೆ

ರಾಜ್ಯ ಸರ್ಕಾರ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ನಿರ್ಧರಿಸಿದೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಪ್ರಕಟಣೆ ಹೊರಡಿಸಿದ್ದಾರೆ.





