ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯೂ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈಗಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೆ ತಮ್ಮ ಬೇಜವಾಬ್ದಾರಿತನ ಮುಂದುವರೆಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಗೌರವಧನ ನೆಚ್ಚಿಕೊಂಡೆ ಜೀವನ ಸಾಗಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸಿಬ್ಬಂದಿಗಳ ವೇತನ ಹೆಚ್ಚಳ, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಗಲು-ರಾತ್ರಿ ಎನ್ನದೇ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ಬೇಜವಬ್ದಾರಿತನ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಇದನ್ನರಿತು ಇನ್ನಾದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಶ್ರಮಿಕರ ಕಷ್ಟಗಳನ್ನು ನಿವಾರಿಸುವ ಕಡೆಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.