ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಂಬಂಧಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದು ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ, ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಿರಬೇಕು ಎಂದು ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆʼಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು. ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ ರಾಜ್ಯಪಾಲರು ಅದನ್ನು ವಿಧಾನಸಭೆಯಲ್ಲಿ ಅಂಗೀಕರಿಸುವಂತೆ ಸೂಚನೆ ನೀಡಿದ್ದಾರೆ.