ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ
ರಜನೀಶ್‌ಗೆ ಸೂಚಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಒಡೆತನದ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಿಎ ನಿವೇಶನ ನೀಡಿದ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮತ್ತೊಂದು ದಾಳ ಉರುಳಿಸಿದ್ದಾರೆ.
ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದರು. ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ ಮೇಲೆ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಈ ಬೆಳವಣಿಗೆ ನಡೆದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.