ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಈ ಬೆಳವಣಿಗೆಗಳಿಂದ ಬಿಜೆಪಿಯವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಕಿಡಿಕಾರಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ಕೊಟ್ಟರು. ಆಗಲೇ ನಮ್ಮ ಪಕ್ಷದವರಿಗೆ ರಾಜ್ಯಪಾಲರ ವಿರುದ್ಧ ಅನುಮಾನ ಬಂದಿತ್ತು. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಗುರಿ ಮಾಡಿಕೊಂಡು ರಾಜಕಾರಣ ಮಾಡುತ್ತಿದೆ. ನಮ್ಮ ಪಕ್ಕಕ್ಕೆ ಹೆಚ್ಚಿನ ಬಹುಮತ ಬಂದಿರುವ ಕಾರಣಕ್ಕೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನ ಕೊಟ್ಟಿದ್ದು ಬಿಜೆಪಿ ಸರ್ಕಾರ. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯರನ್ನು ಬಲಿಪಶು ಮಾಡಲು ಸಂಚು ನಡೆಸುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.