ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ ಕೇಳಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಮತ್ತು ಸಿಎಂ ರಾಜೀನಾಮೆಗೆ ಕೋರಿ ಬಿಜೆಪಿ ಶಾಸಕರ ನಿಯೋಗ ಜುಲೈ.25ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ಸಿದ್ದರಾಮಯ್ಯರಿಂದ ಉತ್ತರ ಕೇಳುವುದು ಅನಿವಾರ್ಯ. ಹೀಗಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಇದು ರಾಜಕೀಯ ಪ್ರೇರಿತ ಎಂದು ನಂಬಲು ಕಾರಣವಿದೆ ಎಂದು ಆರೋಪಿಸಿದ್ದಾರೆ.
ಒಂದು ವೇಳೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಲು ಮುಂದಾದರೆ ನಾವು ಇದನ್ನು ರಾಜಕೀಯ ಪ್ರೇರಿತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಕೂಡ ಕಿಡಿಕಾರಿದ್ದು, ಇದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದ್ದಾರೆ.