ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ.
ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ ವರ್ಷದಿಂದ ಶಿಕ್ಷಣ ಇಲಾಖೆ ಜಾರಿ ಮಾಡಲು ಮುಂದಾಗಿದೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, 25 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ 12 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಈ ವರ್ಷದಿಂದಲೇ ತರಬೇತಿ ಕಾರ್ಯಕ್ರಮ ನಡೆಯಲಿದೆ. ಆನ್‌ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ಸರ್ಕಾರದ ಕಡೆಯಿಂದ ತರಬೇತಿ ನೀಡಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದ್ದು, ನಮ್ಮ ಸರ್ಕಾರ ವಿದ್ಯಾರ್ಥಿಗಳ ಏಳಿಗೆಗೆ ಶ್ರಮ ವಹಿಸುತ್ತಿದೆ ಎಂದರು.
ಇದರ ಜೊತೆಗೆ 8, 9 ಹಾಗೂ 10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.