ಹಾವೇರಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಳಿಗಾಲ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಸಂಬಂಧ ನಾನು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚರ್ಚಿಸಿ ಅಂತಿಮ ಪಟ್ಟಿ ಸಿದ್ದಪಡಿಸಿ ಹೈ ಕಮಾಂಡ್ ಮುಂದೆ ಇಡಲಾಗಿದ್ದು, ಪಕ್ಷದ ವರಿಷ್ಠರ ಅನುಮತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು.
ಬರಪರಿಹಾರದ ಸಂಬಂಧ ರಾಜ್ಯದಲ್ಲಿ ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಎನ್‌ಆರ್‌ಜಿಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವ ದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರ ಇನ್ನೂ ಅನುಮತಿಯನ್ನು ನೀಡಿಲ್ಲ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರದ ತಂಡ ಬಂದು ಪರಿಶೀಲಿಸಿದ್ದರೂ ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನೂ ವಕೀಲರಾಗಿ ಡಿಕೆ ಶಿವಕುಮಾರ್ ಅವರ ತನಿಖೆ ಆದೇಶ ಹಿಂಡೆದದ್ದು ಸರಿಯೇ ಎಂಬ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ, ನಾನು ವಕೀಲನಾಗಿರುವುದರಿಂದಲೇ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ಪ್ರಕರಣ ಕಾನೂನು ರೀತಿಯಲ್ಲಿ ಇಲ್ಲವೆಂದು ಅದನ್ನು ವಾಪಾಸ್ ಪಡೆಯಲಾಗಿದೆ. ನನಗೆ ಕಾನೂನು ಅರಿವು ಇಲ್ಲದಿದ್ದರೇ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಎಚ್‌ಡಿ ಕುಮಾರಸ್ವಾಮಿ ರೀತಿಯಲ್ಲಿ ಕಾನೂನು ಬಾಹಿರವಾಗಿದ್ದರೂ ಪ್ರಕರಣದ ತನಿಖೆಗಾಗಿ ಸಮ್ಮತಿಸುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.