ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ-2025ಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು.
ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಪರಿಷತ್‌ನಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.
ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದರು.





