ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. ೯೭,೮೧೩ ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೧.೨೪ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.೫೦,೦೦೫ ಕೋಟಿ, ಗೃಹಜ್ಯೋತಿ ಯೋಜನೆಯಡಿ ೧.೬೪ ಕೋಟಿ ಫಲಾನುಭವಿಗಳಿಗೆ ರೂ. ೧೮,೧೩೯ ಕೋಟಿ, ಯುವನಿಽ ಯೋಜನೆಯಡಿ ೨.೫೫ಲಕ್ಷ ಫಲಾನುಭವಿಗಳಿಗೆ ರೂ.೬೨೩ ಕೋಟಿ, ಶಕ್ತಿ ಯೋಜನೆಯಡಿ ೫೪೪ಕೋಟಿ ಫಲಾನುಭವಿಗಳಿಗೆ ರೂ.೧೩,೯೦೩ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ ೭೨.೦೨ಕೋಟಿ ಫಲಾನುಭವಿಗಳಿಗೆ ಒಟ್ಟು ೧೧,೮೨೧.೧೭ ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಲಾಯಿತು.
ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು.
ಜಿಎಸ್ಟಿ ರಿಟರ್ನ್ ಸಲ್ಲಿಸುವವರು ಗೃಹ ಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದರು.
ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.





