ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವರಣೆ ಪ್ರಕರಣದಡಿ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ 300 ಕೋಟಿ ರೂ ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಪದೇ ಪದೇ ಮುಡಾದಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳುತ್ತಿದ್ದರು. ಆದರೆ ಅವರ ಮುಖವಾಡ ನಿನ್ನೆ ಕಳಚಿ ಬಿದ್ದಿದೆ. ಸಿಎಂ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ಹಂಚಿಕೆಯಾಗಿರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳಲ್ಲಿ ಸಿದ್ದರಾಮಯ್ಯನವರ ರಾಜಕೀಯ ಪ್ರಭಾವ ಬಳಕೆಯಾಗಿರುವುದು ಇಡಿ ಹೇಳಿಕೆಯಲ್ಲಿ ಸುಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ಮುಡಾ ಆಯುಕ್ತರಾಗಿದ್ದ ನಟೇಶ್ ಸೇರಿದಂತೆ ಮತ್ತಿತರರ ಅಧಿಕಾರಿಗಳು ಇನ್ನೂ ಅನೇಕ ಅಕ್ರಮಗಳನ್ನು ಎಸಗಿರುವುದು ಬೆಳಕಿಗೆ ಬಂದಿದೆ. ಸುಮಾರು 300 ಕೋಟಿ ರೂಪಾಯಿ ಬೆಲೆಬಾಳುವ 142 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.