ರಾಜ್ಯ

ಗಲಭೆಪೀಡಿತ ನಾಗಮಂಗಲಕ್ಕೆ ಎಚ್‌ಡಿ ಕುಮಾರಸ್ವಾಮಿ ಭೇಟಿ

ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು?

ಸಣ್ಣ, ಆಕಸ್ಮಿಕ ಘಟನೆ ಎಂದ ಗೃಹ ಸಚಿವರಿಗೆ ತರಾಟೆ

ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ಕೊಟ್ಟ ಸಚಿವರು

ನಾಗಮಂಗಲ (ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ. ಪೊಲೀಸರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಸಚಿವರ ಎಚ್‌ಡಿ ಕುಮಾರಸ್ವಾಮಿ ಆಗ್ರಹಪಡಿಸಿದರು.

ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಅಧಿಕಾರಿಗಳ ನಡೆ ಸಂಶಯಾಸ್ಪದ
ಗಲಭೆಯ ಎಫ್‌ಐಆರ್ ಪ್ರತಿಯನ್ನು ಹಿಡಿದು ಮಾತನಾಡಿದ ಸಚಿವರು; ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ. ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದು ಹೇಳಿದರು.

ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳಿಸಲಾಗಿದೆ. ಅಲ್ಲದೆ; ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲಿಯೇ ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾದರೆ, ಈ ಇಬ್ಬರು ಅಧಿಕಾರಿಗಳು ಎಲಿದ್ದರು? ಮೀಸಲು ಪಡೆಯನ್ನು ಬೇರೆಡೆಗೆ ಕಳಿಸಿದ್ದು ಯಾಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು?
ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್ ಗಳು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದು ಕೇಂದ್ರ ಸಚಿವರು ಅನುಮಾನ ವ್ಯಕ್ತಪಡಿಸಿದರು.

ಗೃಹ ಸಚಿವರ ವಿರುದ್ಧ ಕಿಡಿ
ನಾಗಮಂಗಲ ಗಲಭೆಯನ್ನು ಸಣ್ಣ, ಆಕಸ್ಮಿಕ ಘಟನೆ ಎಂದು ಕರೆದಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವರು; ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸ್ಮಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡೂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ. ರಾಜಕೀಯಕ್ಕಾಗಿ ಜನರ ಬದುಕು ಛಿದ್ರ ಮಾಡಬೇಡಿ. ಇದು ಸಣ್ಣ ವಿಷಯ. ಇದಕ್ಕೆ ಮಹತ್ವ ಕೊಡುವುದು ಬೇಡ ಎನ್ನುತ್ತಾರೆ ಗೃಹ ಸಚಿವರು. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತಾರೆ ಅವರು? ಮೆರವಣಿಗೆಗೆ ಅನುಮತಿ ಕೊಟ್ಟಿರುವುದೇ ನೀವು.


ಮೆರವಣಿಗೆಗೆ ಭದ್ರತೆ ಕೊಡಬೇಕಾದ ಹೊಣೆಯೂ ನಿಮ್ಮದೇ. ಘಟನೆ ಸ್ಥಳದಲ್ಲಿ ಆಗ ಎಷ್ಟು ಜನ ಪೊಲೀಸರನ್ನು ನಿಯೋಜನೆ ಮಾಡಿದ್ದಿರಿ? ನಿಮ್ಮ ಇನಸ್ಪೆಕ್ಟರ್ ಎಲ್ಲಿ‌ ಇದ್ದರು. ಘಟನೆಗೂ ಮುನ್ನ ಇಲ್ಲಿದ್ದ ಮೀಸಲುಪಡೆ ವಾಹನವನ್ನು ವಾಪಸ್ ಕರೆಸಿಕೊಂಡಿದ್ದಾರೆ. ಘಟನೆ ನಡೆದ ಒಂದು‌ ಗಂಟೆಗೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಅವರು ಒತ್ತಾಯ ಮಾಡಿದರು.

ಅಧಿಕಾರಿ ಅಮಾನತು ಕಣ್ಣೊರೆಸುವ ತಂತ್ರ
ನಾನು ನಾಗಮಂಗಲಕ್ಕೆ ಬರುತ್ತೇನೆ ಎಂದು ಗುರುವಾರವೇ ಹೇಳಿದ್ದೆ. ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು. ಅದಕ್ಕಾಗಿಯೇ ಇನ್ಸ್ಪೆಕ್ಟರ್ ಅಶೋಕ್‌ ರನ್ನು ಸಸ್ಪೆಂಡ್ ಮಾಡಿದ್ದಾರೆ. ಇದು ಕಣ್ಣೊರೆಸುವ ತಂತ್ರ ಎಂದ ಸಚಿವರು; ಮಸೀದಿ ಬಳಿ 10 ನಿಮಿಷ ಡಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡುತಿದ್ದರು? ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಇನಸ್ಪೆಕ್ಟರ್, ಡಿವೈಎಸ್ಪಿ ಯಾರೂ ಇರಲಿಲ್ಲ. ಆದರೆ ಎಫ್‌ಐಆರ್‌ನಲ್ಲಿ ಅವರು ಇದ್ದರು ಎಂದು ಬರೆಯಲಾಗಿದೆ. ಇದು ಯಾವ ಜಾದು? ಎಂದು ಪ್ರಶ್ನಿಸಿದರು.

ಆತ ತ್ರಿಕಾಲಜ್ಞಾನಿಯೇ?
ದೂರು ನೀಡಿರುವ ಅಧಿಕಾರಿ ರವಿಗೆ ರಾತ್ರಿ 1.30ರಲ್ಲಿ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಹೆಸರುಗಳು ಹೇಗೆ ಗೊತ್ತು? ಪೆಟ್ಟು ತಿಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಅಷ್ಟು ಜನರ ಹೆಸರುಗಳು ನೆನಪಾಗಿದ್ದು ಹೇಗೆ? ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ! ಆತನೇನು ತ್ರಿಕಾಲಜ್ಞಾನಿಯೇ? ಎಂದು ಕೇಂದ್ರ ಸಚಿವರು ಅಚ್ಚರಿ ವ್ಯಕ್ತಪಡಿಸಿದರು.

ಪ್ರತಿಯೊಂದರಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಲ್ಲಿ ಅಮಾಯಕ‌ ಜನರ ಬದುಕು‌ ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ರಾಜ್ಯದಲ್ಲಿದೆ. ಆಗಿರುವ ಲೋಪ ಒಪ್ಪಿಕೊಳ್ಳುವುದು ಬಿಟ್ಟು ಸಮುದಾಯಗಳ ನಡುವೆ ಕಂದಕ ತೊಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.

ನೊಂದವರಿಗೆ ಆರ್ಥಿಕ ನೆರವು
ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಅವರು ಪರಿಹಾರವಾಗಿ ನೀಡಿದರು.

ಸರ್ಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಅವರು ಹೇಳಿದರು.

ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿ ಅನೇಕ ಮುಖಂಡರು ಜತೆಯಲ್ಲಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

2 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago