ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇಂದು ಎಚ್.ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸಿದರು. ಈ ವೇಳೆ ಬೆಂಗಳೂರಿನ ವಿಮಾನನಿಲ್ದಾಣದ ಬಳಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ಸಂಸದ ಮಲ್ಲೇಶ್ ಬಾಬು, ನಿಸರ್ಗ ನಾರಾಯಣಸ್ವಾಮಿ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಸೇಬಿನಹಣ್ಣು, ಮೂಸಂಬಿ ಹಾರ ಹಾಕಿ ಸ್ವಾಗತ ಕೋರಿ ಅಭಿನಂಧಿಸಿದರು.
ಅಭಿನಂದನೆ ಸ್ವೀಕರಿಸಿ ಬಳಿಕ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾಗಿ ನನ್ನ ಕರ್ಮ ಭೂಮಿಗೆ ಆಗಮಿಸಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. ವಿಶೇಷವಾಗಿ ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಅಭಿನಂದನೆ ಎಂದು ಹೇಳಿದರು.





