Mysore
22
overcast clouds
Light
Dark

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ಮೇ.31 ರಂದು ರಾಜ್ಯ ಪ್ರವೇಶಿಸಲಿದೆ. ಮೇ.27 ರಿಂದ 4 ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇ. 27 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಇತರೆ ಭಾಗಗಳಲ್ಲೂ ಸಾಧಾರಣ ಮಳೆ ಸುರಿಯುವ ಸಾಧ್ಯೆತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಅದೇ ರೀತಿ ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಆಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗವು 40 ರಿಂದ 50 ಕಿಲೋ ಮಿಟರ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ದಕ್ಷಿಣ ಭಾಗದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ಇನ್ನು ಬೀದರ್, ಗದಗ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.