ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ.
ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಒಳಚರಂಡಿಗಳು ಭರ್ತಿಯಾಗಿ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸವಾರರು, ಮುಚ್ಚಿಹೋಗಿರುವ ಚರಂಡಿಗಳೇ ಇದಕ್ಕೆ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಅವುಗಳನ್ನು ಸ್ವಚ್ಛಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.