ಗುಜರಾತ್: ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಿಂದಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಇದುವರೆಗೂ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 23,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಇದುವರೆಗೂ 300ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಈಗಾಗಲೇ 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ 22 ತುಕಡಿಗಳನ್ನು ನಿಯೋಜಿಸಲಾಗಿದೆ.
ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕಗ್ಗತ್ತಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮಳೆ ಇನ್ನೂ ನಾಲ್ಕೈದು ದಿನ ಮುಂದುವರಿಯಲಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಏನಾದರೂ ಸಮಸ್ಯೆ ಕಂಡುಬಂದರೆ ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಿದೆ.