ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಮತ್ತು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ.21ರಂದು ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮನೆ ಮಾಡಿದ್ದು, ಈ ತಿಂಗಳಾಂತ್ಯಕ್ಕೆ ಮುಂಗಾರು ಮಳೆ ಆಗಮನವಾಗುವ ಎಲ್ಲಾ ನಿರೀಕ್ಷೆಯಿದೆ.