ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಎಡಬಿಡದೆ ಮಳೆಯಾಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ತೀರ ಹಾಗೂ ಬೆಟ್ಟ ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





