ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ.
ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು 90,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಅಣೆಕಟ್ಟಿನ ಕೆಳಭಾಗದಲ್ಲಿ ಪ್ರವಾಹ ಉಂಟಾಗಬಹುದು. ಹಾಗಾಗಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಳೆ ಹೀಗೆಯೇ ಮುಂದುವರಿದರೆ ಇನ್ನೂ ಮೂರ್ನಾಲ್ಕು ದಿನಗಳ ಕಾಲ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿಯಲಿದ್ದು, ಜಲಾನಯನ ಪ್ರದೇಶದ ಜನತೆಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ.
ವರದಾ, ತುಂಗಾ ಹಾಗೂ ಭದ್ರಾನದಿಗಳ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ ನಾಳೆ ಸಂಜೆಯವರೆಗೂ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.