ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆದರೆ ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಮಳೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಗಾಳಿಯ ವೇಗವೂ ಜಾಸ್ತಿಯಾಗಲಿದೆ ಎಂದು ಮಾಹಿತಿ ನೀಡಿದೆ.





