ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ.
ನಿನ್ನೆಯಷ್ಟೇ ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ಬಗ್ಗೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮ ಎಂದರು.
ಇನ್ನು ನಿಗಮ ಹಾಗೂ ಮಂಡಳಿಗಳ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದ ದಿನದಿಂದಲೂ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.