ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಸಿಬಿಐ, ಲೋಕಾಯುಕ್ತ, ಕೇಂದ್ರ ಗೃಹ ಇಲಾಖೆ, ಪ್ರರಕಣದ ಪ್ರಮುಖ ಆರೋಪಿಗಳಾದ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನಯ್ಯ, ಹಾಗೂ ಜಮೀನು ಮಾಲೀಕ ದೇವರಾಜು ಅವರುಗಳಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಏಪ್ರಿಲ್.28ಕ್ಕೆ ಮುಂದೂಡಿತು.
ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರು ಸರ್ಕಾರದ ಅಧೀನದಲ್ಲಿದ್ದಾರೆ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್.28ರಂದು ಮತ್ತೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯದಲ್ಲಿ ಪರ-ವಿರೋಧ ವಾದ ಮಂಡನೆ ನಡೆಯಲಿದೆ.