ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರಾದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮಣ್ಣಿನಡಿ ಸಿಲುಕಿಕೊಂಡಿರುವ 9 ಜನರಲ್ಲಿ ಒಂದೇ ಕುಟುಂಬ 7 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಗುಡ್ಡ ಕುಸಿತದಿಂದ ಏಳು ಮಂದಿ ಮೃತರಾಗಿದ್ದು, ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಇಬ್ಬರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡ ಕಾರ್ಯಪ್ರವೃತ್ತರಾಗಿದ್ದಾರೆ. ಗುಡ್ಡ ಕುಸಿತಕ್ಕೆ ಸಿಲುಕಿರುವವರನ್ನು ರಕ್ಷಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.





