ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದೆ.
ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಆದರೆ ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ರಾಜ್ಯ ಸಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್), ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜೂ.೩೦ರಿಂದ ಅನ್ವಯವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿದ್ದವು.
ಜೂನ್ ೩೦ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯದ ಜನವರಿ ೧೨ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದವು. ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಯಲ್ಲಿ ತಿಳಿಸಿತ್ತು.
ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ದರಿಂದ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಕೋರಿದರು.
ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್ ೩೧ರ ಅಂತ್ಯದ ವೇಳೆಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.




