Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ.

ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನಃ ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು.

ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

Tags:
error: Content is protected !!