ಬೆಂಗಳೂರು: ಸಚಿವರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ ಆರೋಪಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನ ಪರಿಷತ್ತಿಗೆ ತಿಳಿಸಿದರು.
ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದಾಗ ಮಧ್ಯೆ ಪ್ರವೇಶಿಸಿದ ಸಚಿವರು, ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉನ್ನತಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.
ಹನಿಟ್ರ್ಯಾಪ್ ವಿಚಾರವನ್ನು ಬದಿಗಿಡುವ,ಇಲ್ಲವೆ ಮುಚ್ಚಿಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಈ ವಿಚಾರದಲ್ಲಿ ಸತ್ಯಾಂಶವಿದ್ದರೆ ಬೆಳಕಿಗೆ ಬರಲಿ ಎಂಬ ಉದ್ದೇಶದಿಂತ ತನಿಖೆ ನಡೆಸಲಾಗುತ್ತದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳಿಗೆ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಸಭಾನಾಯಕ ಎನ್.ಎಸ್.ಭೋಸರಾಜು ಮಾತನಾಡಿ, ಬಿಜೆಪಿ ಸೇರಿದಂತೆ ಎಲ್ಲಾ ಕಡೆ ಆರೋಪವಿದೆ. ಈ ವಿಚಾರವನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ ಎಂದರು.
ವಿಷಯ ಪ್ರಸ್ತಾಪಿಸಿದ ಛಲವಾದಿ ನಾರಾಯಣಸ್ವಾಮಿ ಅವರು ಕೆಲವು ದಿನಗಳಿಂದ ಸರ್ಕಾರದಲ್ಲಿ ಗೊಂದಲದ ವಾತಾವರಣವಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಸಚಿವ ರಾಜಣ್ಣ ಸೇರಿದಂತೆ ೪೮ ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂಬ ಆರೋಪ ಮಾಡಿದ್ದಾರೆ. ಹನಿಟ್ರ್ಯಾಪ್ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.





