ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನರ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು.
ಕೆಲವು ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದ್ದು, ಇಂದು ಅಥವಾ ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ತಿಮ್ಮಕ್ಕ ಅವರ ಪುತ್ರ ಉಮೇಶ್ ಮಾಹಿತಿ ನೀಡಿದ್ದು, ತಾಯಿಗೆ 113 ವರ್ಷ, ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದೆವು. ಈಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಇನ್ನು ನೂರಾರು ಮರಗಳ ಪಾಲನೆ ಪೋಷಣೆ ಮಾಡುವ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲು ಮರದ ತಿಮ್ಮಕ್ಕ ಅವರು ಈವರೆಗೆ ಲಕ್ಷಾಂತರ ಸಸಿ ನೆಟ್ಟು ಪೋಷಣೆ ಮಾಡಿದ್ದಾರೆ.