ಬೆಂಗಳೂರು: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ನನ್ನನ್ನು ಸಿಎಂ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಸಿಎಂ ಸ್ಥಾನ ಸಹ ಖಾಲಿ ಇಲ್ಲ. ನಾನು ಅದರ ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು ಎಂದು ತಿಳಿಸಿದ್ದಾರೆ.
ಇನ್ನು ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕೋರಿದ್ದಾರೆ.



