ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ರಾಜೀನಾಮೆ ಬಗ್ಗೆ ಕೇಳುವ ಯಾವುದೇ ನೈತಿಕತೆ ಇಲ್ಲ ತಿರುಗೇಟು ನೀಡಿದರು.
ಇನ್ನು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರಯತ್ನಿಸಿ, ನಮ್ಮ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ನನ್ನ ರಾಜೀನಾಮೆ ಕೇಳುವ ಯಾವುದೇ ನೈತಿಕತೆ ಕುಮಾರಸ್ವಾಮಿಗೆ ಇಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಬೇಲ್ ಮೇಲೆ ಹೊರಗಿದ್ದಾರೆ. ಹೀಗಿರುವಾಗ ನಾನೇಕೆ ರಾಜೀನಾಮೆ ಕೊಡಬೇಕು? ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.





