ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸುವ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಂಗನ ಕಾಯಿಲೆಗೆ ಎಬಿಎಆರ್‌ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್‌ಡಿ ಪ್ರಕರಣ ದಾಖಲಾಗಿವೆ. 20 ಸಕ್ರಿಯ ಪ್ರಕರಣಗಳಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ಗುಂಡೂರಾವ್ ವಿವರಿಸಿದರು.