ಬೆಂಗಳೂರು: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದು, ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲೂ ಬಿಜೆಪಿ-ಜೆಡಿಎಸ್ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಈಗ ಚುನಾವಣೆ ನಡೆದರೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಏರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ದಿವಾಳಿಯತ್ತ ನಡೆದಿದೆ. ಅನುಪಯುಕ್ತ ಗ್ಯಾರಂಟಿಗಳ ಕಾರಣಕ್ಕೆ ಬೆಲೆ ಏರಿಕೆ ನಿರಂತರವಾಗಿ ಮುಂದುವರಿದಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಸರ್ಕಾರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಈಗ ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಪಕ್ಷ ಸಂಪೂರ್ಣ ಅವನತಿಯತ್ತ ಸಾಗುತ್ತಿದೆ. ರಾಜ್ಯ ಸರ್ಕಾರದ ನಡೆಯಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.