ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಹಣವನ್ನು ನೀಡಿದರೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಆಗ ದರ ಹೆಚ್ಚಿಸುವ ಅಗತ್ಯ ಬರುವುದಿಲ್ಲ ಎಂದರು.
ಕೇಂದ್ರದ ಪೆಟ್ರೋಲ್, ಡೀಸೆಲ್ ದರ ಏರಿಕೆಯ ಪರಿಣಾಮವೂ ರಾಜ್ಯದ ಮೇಲೆ ಬೀರಿದೆ ಎಂದು ಆರೋಪಿಸಿದ ಅವರು, ರೈತರ ಪರವಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದಿದ್ದಾರೆ. ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದೂ ಹೇಳಿರುವ ಪರಮೇಶ್ವರ್, ಕೇಂದ್ರ ಸಹಕಾರ ನೀಡಿದರೆ ದರ ಹೆಚ್ಚಿಸುವುದಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚುವರಿ ಮೀಸಲಾತಿಯನ್ನು ಹೈಕೋರ್ಟ್ ರದ್ದುಪಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರಕ್ಕೂ ಮನವಿ ಮಾಡುವುದಾಗಿ ಹೇಳಿದರು.
ತಮಿಳುನಾಡಿನಲ್ಲಿ ಶೇಕಡಾ 69ರಷ್ಟು ಮೀಸಲಾತಿ ಇದೆ ಎಂದು ಉಲ್ಲೇಖಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರವೇ ಈ ಕ್ರಮ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ಸದ್ಯ ನೇಮಕಾತಿಯಲ್ಲಿ ಗೊಂದಲ ಉಂಟಾಗಿದ್ದು, ಸುಪ್ರೀಂಕೋರ್ಟ್ನ ತೀರ್ಮಾನವನ್ನು ಕಾದು ನೋಡೋಣ ಎಂದು ಪರಮೇಶ್ವರ್ ತಿಳಿಸಿದರು.




