ಚಿಕ್ಕಮಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅದನ್ನು ಸರಪಡಿಸಲು ಸೂಕ್ತ ಸ್ಥಾನಮಾನ ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಿಟಿ ರವಿ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಇರಬೇಕಿತ್ತು. ಆದರೆ ಅವರಿಗೆ ಅನ್ಯಾಯವಾಗಿದ್ದು, ಇದನ್ನು ಸರಿಪಡಿಸಲು ನಾನು ಎಲ್ಲ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಇದಕ್ಕು ಮೊದಲು ಮಾತನಾಡಿದ ಸಿಟಿ ರವಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಸುಳ್ಳು ಅಪಪ್ರಚಾರ ಮಾಡಲಾಯಿತು. ಹಾಗಾಗಿ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು. ನಾಲ್ಕು ಬಾರಿ ಶಾಸಕನಾಗಿ ಹೆಚ್ಚು ಕೆಲಸ ಮಾಡಿದರು ಚುನಾವಣೆ ವೇಳೆ ಕೆಲಸಗಳ ಮೇಲೆ ಚರ್ಚೆಯಾಗದೇ ನನ್ನ ವಿರದ್ಧ ಅಪಪ್ರಚಾರವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.





