ಜೈಕಾ ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಯೋಜನೆ
ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ.
ಅಕ್ಟೋಬರ್ 16 ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು,ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ.
ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. ಟಿ.ಕೆ.ಹಳ್ಳಿಯ ಜಲಮಂಡಳಿ ಆವರಣದಲ್ಲಿ ಹಮ್ಮಿಕೊಂಡಿರುವ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 10.30 ಗಂಟೆಗೆ ತೊರೆಕಾಡನಹಳ್ಳಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಜಲಮಂಡಳಿ ಆವರಣದಲ್ಲಿ ಗಿಡಗಳನ್ನು ನೆಡೆಸಲಿದ್ದಾರೆ. ನಂತರ ಉಪಮುಖ್ಯಮಂತ್ರಿಗಳು, ಜಪಾನ್ ಪ್ರತಿನಿಧಿಗಳು, ಜೈಕಾ ಪ್ರತಿನಿಧಿಗಳು ಹಾಗೂ ಮುಖ್ಯ ಅತಿಥಿಗಳ ಜೊತೆಗೂಡಿ ನೀರು ಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ ಮೂಲಕ) ಮಾಡುವ ಮೂಲಕ, ಕಾವೇರಿ 5 ನೇ ಹಂತ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜೈಕಾ ಪ್ರತಿನಿಧಿಗಳು, ಕೇಂದ್ರ ಸಚಿವರು/ರಾಜ್ಯ ಸಚಿವರುಗಳು, ಸಂಸದರು ಮತ್ತು ಶಾಸಕರು,ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಶ್ರಮಿಸಿದ ಜೈಕಾ ಪ್ರತಿನಿಧಿಗಳು, ಗುತ್ತಿಗೆದಾರರು,ಜಲಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಂದ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ಕಾವೇರಿ 5 ನೇ ಹಂತ ಕುಡಿಯುವ ನೀರಿನ ಯೋಜನೆ ಪ್ರಮುಖಾಂಶ :
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಈ ಯೋಜನೆ ಬಹಳ ಪ್ರಮುಖ್ಯತೆಯನ್ನು ಪಡೆದುಕೊಂಡಿದೆ. ಸುಮಾರು ಒಂದೂವರೆ ಕೋಟಿಯಷ್ಟು ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರು ನಗರಕ್ಕೆ ಅಗತ್ಯವಿರುವುದು 2,250 ಎಂ.ಎಲ್.ಡಿಯಷ್ಟು ನೀರು. ಆದರೆ ನಾಲ್ಕೂ ಹಂತಗಳ ಕಾವೇರಿ ನೀರಿನ ಯೋಜನೆಯಿಂದ ನಮಗೆ ಲಭ್ಯವಾಗುತ್ತಿದ್ದುದ್ದು ಕೇವಲ 1450 ಎಂ.ಎಲ್.ಡಿಯಷ್ಟು ಮಾತ್ರ. ಇದ್ದಂತಹ ನೀರಿನ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಾವೇರಿ 5 ನೇ ಹಂತದ ಯೋಜನೆಯನ್ನು 2014 ರಲ್ಲಿ ಯೋಜಿಸಲಾಯಿತು. 4336 ಕೋಟಿ ರೂಪಾಯಿ ವೆಚ್ಚದ ಈ ಬೃಹತ್ ಯೋಜನೆ, ದೇಶದ ಅತಿದೊಡ್ಡ ಕುಡಿಯುವ ನೀರಿನ ಯೋಜನೆಯಾಗಿದೆ. ಒಂದೇ ಹಂತದಲ್ಲಿ ಅಗಾಧ 775 ಎಂ.ಎಲ್.ಡಿಯಷ್ಟು ನೀರನ್ನ ಸರಬರಾಜು ಮಾಡುವ ಸಾಮರ್ಥ್ಯ ಹೊಂದಿದೆ.
ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಸರಬರಾಜು ಸಾಧ್ಯವಾಗಲಿದೆ. ಮನೆ ಮನೆಗೂ ಕಾವೇರಿ ನೀರು.. ಇದು ಸಮೃದ್ದ ಬೆಂಗಳೂರು ಧ್ಯೇಯವಾಕ್ಯದ ಅಡಿಯಲ್ಲಿ ಯೋಜನೆ ಲೋಕಾರ್ಪಣೆಯಾಗಲಿದೆ.
ಅತ್ಯಾಧುನಿಕ ಪ್ರವಾಹ ನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ನಿರಂತರವಾಗಿ ಕಾರ್ಯಾಚರಣೆ ಸಾಧ್ಯವಾಗಲಿದೆ. ಕಾವೇರಿ ಐದನೇ ಹಂತದ ಯೋಜನೆಯಲ್ಲಿ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ಮೂರು ಅತ್ಯಾಧುನಿಕ ತಂತ್ರಜ್ಞಾನದ ಸುಧಾರಿತ ಬೂಸ್ಟರ್ ಪಂಪಿಂಗ್ ಕೇಂದ್ರಗಳನ್ನು ನಿರ್ಮಿಸಲಾಗಿದೆ.
ಈ ಪಂಪಿಂಗ್ ಕೇಂದ್ರಗಳ ಸಹಾಯದಿಂದ ಸುಮಾರು 110 ಕಿಲೋಮೀಟರ್ ದೂರದಿಂದ 500 ಹಾಗೂ 2200 ಎಂಎಂನಷ್ಟು ವ್ಯಾಸದ ಬೃಹತ್ ಉಕ್ಕಿನ ಪೈಪ್ಗಳ ಮೂಲಕ ಕಾವೇರಿ ನೀರನ್ನು 450 ಮೀಟರ್ ಎತ್ತರಕ್ಕೆ ಹರಿಸಿ (ಸುಮಾರು 50 ಅಂತಸ್ತಿನ ಕಟ್ಟಡದಷ್ಟು ಎತ್ತರ) ಬೆಂಗಳೂರು ನಗರಕ್ಕೆ ನೀರನ್ನು ಪೂರೈಸಲಾಗುತ್ತದೆ. ಕಾವೇರಿ 5ನೇ ಹಂತದ ಯೋಜನೆಗೆ 1,45,000 ಮೆಗಾ ಟನ್ ಸ್ಟೀಲ್ ಪ್ಲೇಟ್ಗಳ ಬಳಕೆ ಮಾಡಲಾಗಿದೆ. 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಕಾಂಕ್ಷೆಯ ಯೋಜನೆ ಪೂರೈಸಲು 2.4 ಕೋಟಿ ಮಾನವ ಗಂಟೆಗಳ ಶ್ರಮ ಬಳಕೆಯಾಗಿದೆ.
ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ.
ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…