ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದು ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು.
ಭಾರೀ ಮಳೆಯ ನಡುವೆಯೂ ಸಚಿವರು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವೆನಿಸಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅಥವಾ ಅವರ ಯಾವುದೇ ಸಚಿವರು ಭಾಗಿಯಾಗಿರಲಿಲ್ಲ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಚನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾಗರ ತಾಲ್ಲೂಕಿನ ಅಂಬರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಈ ಸೇತುವೆಯನ್ನು 472 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸೇತುವೆಯು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ.
ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ-ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸಿದ್ದರು.
ಹೀಗಾಗಿ 2019ರಲ್ಲಿ ಕೇಬಲ್ ಮೇಲ್ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ ವೆಚ್ಚದ ಕಾಮಗಾರಿಯನ್ನು ಉದ್ಘಾಟನೆ ಮಾಡಿದ್ದರು.
2020ರ ಡಿಸೆಂಬರ್‌ನಲ್ಲಿ ಪ್ರಾರಂಭಗೊಂಡಿದ್ದ ಕಾಮಗಾರಿಯು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಈ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.





