ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. ವಿಷಯ ತಿಳಿದ ಕೂಡಲೇ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿ ಕನ್ನಡಿಗರ ಸುರಕ್ಷತೆ ಬಗ್ಗೆ ವಿಚಾರಿಸಿದ್ದೇನೆ. ಕನ್ನಡಿರ ಜೊತೆ ಸಂಪರ್ಕದಿಂದ ಇದ್ದು ಸಹಾಯ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು.
ಪ್ರವಾಸೋದ್ಯಮ ಕೇಂದ್ರವಾದ ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದ ಕ್ರಮಗಳಿಂದ ಶಾಂತ ರೀತಿಯ ವಾತಾವರಣ ಸೃಷ್ಟಿಯಾಗಿತ್ತು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು. ಆದ್ದರಿಂದ ಪಾಕಿಸ್ತಾನದವರಿಗೆ ಸಹಿಸಲು ಆಗದೇ ಈ ಕೃತ್ಯ ಎಸಗಿದ್ದಾರೆ ಎಂದು ಕಿಡಿಕಾರಿದರು.





